BBMP
Loading ...

ಬೆಂಗಳೂರು : ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಆರೋಗ್ಯ ಇಲಾಖೆ ಹಲವು ಮಾರ್ಗಸೂಚಿಗಳನ್ನು ಈ ಸಂಬಂಧ ಹೊರಡಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದೆ. ರಾಜ್ಯ ಸರ್ಕಾರ ಡೆಂಗ್ಯೂ ನಿಯಂತ್ರಣಕ್ಕೆ ಹೊಸ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಕೂಡಾ ಡೆಂಗ್ಯೂ ಅಬ್ಬರಕ್ಕೆ ಮಂಗಳವಾರ (ಜುಲೈ 9) ಶಂಕಿತರಿಬ್ಬರು ಬಲಿಯಾಗಿದ್ದಾರೆ. ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 91 ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿಯಲ್ಲಿ ಎಲ್ಲೆಂದರಲ್ಲಿ ಕಸವನ್ನು ಬಿಸಾಕುತ್ತಿರುವುದೂ ಡೆಂಗ್ಯೂ ಹೆಚ್ಚಾಗಲು ಒಂದು ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ಸಂಬಂಧ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ, ರಾಜ್ಯ ಸರ್ಕಾರ, ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ. ಕಸವನ್ನು ಬಿಬಿಎಂಪಿ ಕಸ ಸಂಗ್ರಹ ವಾಹನಗಳಿಗೆ ತುಂಬ ಬೇಕು ಎನ್ನುವ ಸೂಚನೆಯನ್ನು ಯಾರೂ ಪಾಲಿಸುತ್ತಿಲ್ಲ. ಜೊತೆಗೆ, ಒಣ ಮತ್ತು ಹಸಿಕಸ ಬೇರ್ಪಡಿಸಬೇಕು ಎನ್ನುವ ಸೂಚನೆಗಳನ್ನೂ ಜನ ಕ್ಯಾರೇ ಮಾಡುತ್ತಿಲ್ಲ. ಒಂದಷ್ಟು ದಿನ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾದರೂ, ಸಾರ್ವಜನಿಕರಿಂದ ಇದಕ್ಕೂ ಸೂಕ್ತ ಸ್ಪಂದನೆ ವ್ಯಕ್ತವಾಗದ ಹಿನ್ನಲೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ಕಸ ಬಿಸಾಕುವುದು ಬಹುತೇಕ ಕಡೆ ಹಾಗೇ ಇದೆ.

ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯು ತಮ್ಮ ಅಸಾಹಕತೆಯನ್ನು ಸರ್ಕಾರದ ಮುಂದಿಟ್ಟಿದೆ. ಇದಕ್ಕೆ ಸ್ಪಂದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿಗೆ ನಿರ್ದೇಶವನ್ನು ನೀಡಿದ್ದಾರೆ. ಸೂಚನೆ ಪಾಲಿಸದವರ ವಿರುದ್ದ ಪ್ರಕರಣ ದಾಖಲಿಸುವಂತೆಯೂ ಆದೇಶಿಸಿದ್ದಾರೆ. ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರ ಅಳವಡಿಸಲು ಸೂಚನೆ ನೀಡಲಾಗಿದೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ.

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ; ಜುಲೈ 13 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

Leave a Reply

Your email address will not be published. Required fields are marked *