ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಒಂದು ವೇಳೆ ನಿಯಮ ಮೀರಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಧೂಮಪಾನ ನಿಷೇಧಿಸಿ, ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟಿಲ್ ಅಧಿಸೂಚನೆ ಹೊರಡಿಸಿದ್ದಾರೆ.
ನೋಟಿಫಿಕೇಶನ್ ಉಲ್ಲೇಖಿಸಿರುವಂತೆ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ಕಾಯಿದೆ, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.
ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚಏರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸಬೇಕಿದೆ.
ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ರಾಜ್ಯ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ: ನ.20ರಂದು ರಾಜ್ಯಾಧ್ಯಂತ ಮದ್ಯ ಮಾರಾಟ ಬಂದ್


