ಬೆಂಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ್ ವಿಧಿವಶರಾಗಿದ್ದಾರೆ. 80 ವರ್ಷ ವಯಸ್ಸಯಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಾನಗಲ್ಲ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ಲ ನಗರದ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ನಾಳೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಬಲಿಜ ಸಮುದಾಯಕ್ಕೆ ಸೇರಿದ್ದ ಮನೋಹರ್ ತಹಶೀಲ್ದಾರ್ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು. ಈಗ ಮನೋಹರ ತಹಶೀಲ್ದಾರ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮನೋಹರ್ ತಹಶೀಲ್ದಾರ ನಿಧನಕ್ಕೆ ಜಿಲ್ಲೆಯ ಮುಖಂಡರು ಹಾಗೂ ಅಭಿಮಾನಿ ಬಳಗ ಸಂತಾಪ ಸೂಚಿಸಿದೆ.
ಬಾಗಲಕೋಟೆಯಲ್ಲಿ ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿಯ ಎರಡೂ ಕೈಗಳು ಛಿದ್ರ


