ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 11 ಮಂದಿ ಕಾಲ್ತುಳಿತ ಸಾವಿಗೆ ಕಾರಣ ಹಾಗೂ ಸಾವಿಗೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಮ್ಯಾಜಿಸ್ಟೀರಿಯಲ್ ತನಿಖೆ ಗುರುವಾರ ಆರಂಭವಾಗಿದೆ. ಈ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ಯಾರೆಲ್ಲಾ ಅಮಾನತು?
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್.
ಬೆಂಗಳೂರು ಸೆಂಟ್ರಲ್ ಡಿಸಿಪಿ.
ಬೆಂಗಳೂರು ಸೆಂಟ್ರಲ್ ಎಸಿಪಿ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು.
ಚಿನ್ನಸ್ವಾಮಿ ಕ್ರೀಡಾಂಗಣದ ಇನ್ಚಾರ್ಜ್.
ಕಾಲ್ತುಳಿತದ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ
ಗುರುವಾರ ರಾತ್ರಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು, ” ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ” ಎಂದು ತಿಳಿಸಿದರು.
ಘಟನೆ ನಮ್ಮನ್ನು ಘಾಸಿಗೊಳಿಸಿದೆ
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ ಎಂದು ಸಿದ್ದರಾಮಯ್ಯ ಬೇಸರವ್ಯಕ್ತಪಡಿಸಿದರು.
ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ
ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.


