Greater Bengaluru News9 : ಇಸ್ರೇಲ್-ಇರಾನ್ ಯುದ್ಧದಿಂದ ಗ್ಯಾಸ್ ಸಿಲಿಂಡರ್ ಅಭಾವಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಈ ಮದ್ಯಪ್ರಿಯರಿಗೆ ಒಂದು ಶಾಕಿಂಗ್ ನ್ಯೂಸ್ ಇದೆ. ಬೆಂಗಳೂರಿನಲ್ಲಿ (Bengaluru) ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ಪ್ರತಿಭಟನೆ ಹಿನ್ನೆಲೆ ನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.
ನಾಳೆ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಪ್ರತಿಭಟನೆ ನಡೆಸಲಿದ್ದಾರೆ. ಇದರ ಬೆನ್ನಲ್ಲೇ ಅಂದರೆ ಮಾರ್ಚ್ 25ರಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಕೂಡ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈ ಎರಡು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಪ್ರತಿಭಟನೆಯಲ್ಲಿ ಭಾಗಿಯಾಗುವ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಮತ್ತು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಭೀತಿ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10 ಗಂಟೆಯ ತನಕ ಬೆಂಗಳೂರು ನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯ ಉಪ್ಪಾರಪೇಟೆ, ಸಿಟಿ ಮಾರ್ಕೆಟ್, ಕಾಟನ್‌ಪೇಟೆ, ಕಲಾಸಿಪಾಳ್ಯ, ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿ ಮತ್ತು ಶೇಷಾದ್ರಿಪುರಂ, ಹೈಗೌಂಡ್ಸ್, ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಎಲ್ಲಾ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರದ ಕಮಿಷನರ್ ಸೀಮಂತ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.


