BBMP
Loading ...

Vinay Kulkarni

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಶಾಸಕ ವಿನಯ್​ ಕುಲಕರ್ಣಿ ಅವರನ್ನು ದೋಷಿ ಎಂದು ಏಪ್ರಿಲ್​ 15ರಂದು ತೀರ್ಪು ಪ್ರಕಟಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಿದೆ. ಮಾಜಿ ಸಚಿವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ವಿನಯ್​ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೂ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್​ಗೆ 7 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡವನ್ನು ವಿಧಿಸಿದೆ. ಇದೇ ಸಮಯದಲ್ಲಿ 16 ಲಕ್ಷ ರೂ. ಪರಿಹಾರ ಹಣವನ್ನು ಹತ್ಯೆಯಾದ ಯೋಗೀಶ್​ ಗೌಡ ಅವರ ಮಕ್ಕಳಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಅಂದಹಾಗೆ, ಈ ಮಹತ್ವದ ತೀರ್ಪನ್ನು ನ್ಯಾಯಾಧೀಶರಾದ ಗಜಾನನ ಭಟ್ ಅವರು​ ಪ್ರಕಟಿಸಿದರು.

ಏಪ್ರಿಲ್​ 15ರಂದು ವಿನಯ್​ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ಪ್ರಕಟಿಸಿತು. ಅಲ್ಲದೆ, ಅವರನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸುವಂತೆ ನ್ಯಾಯಾಲಯ ಸೂಚನೆ ನೀಡಿತು. ಅಂದೇ ಸಿಬಿಐ ಅಧಿಕಾರಿಗಳು ವಿನಯ್​ ಕುಲಕರ್ಣಿ ಸೇರಿದಂತೆ ಇತರೆ ಅಪರಾಧಿಗಳನ್ನು ತಮ್ಮ ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದರು. ಇಂದು ಶಿಕ್ಷೆ ಪ್ರಮಾಣ ಪ್ರಕಟ ಹಿನ್ನೆಲೆಯಲ್ಲಿ ಎಲ್ಲ ಅಪರಾಧಿಗಳು ಪೊಲೀಸ್​ ಬಿಗಿ ಬಂದೋಬಸ್ತ್​ನಲ್ಲಿ ಕೋರ್ಟಿಗೆ ಹಾಜರಾಗಿದ್ದರು. ಅಂತಿಮವಾಗಿ ಇಂದು ಶಿಕ್ಷೆ ಪ್ರಮಾಣ ಪ್ರಕಟ ಮಾಡಿದ ಕೋರ್ಟ್​, ಮಾಜಿ ಸಚಿವ ವಿನಯ್​ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ತೀರ್ಪು ಕೇಳುತ್ತಿದ್ದಂತೆ ವಿನಯ್​ ಕುಲಕರ್ಣಿ ಕಣ್ಣೀರಿಟ್ಟರು. ಇದೇ ವೇಳೆ ಜೈಲಿಗೆ ಹೋಗುವ ಮುನ್ನ ಬಟ್ಟೆ ಬದಲಿಸಲು ಅನುಮತಿ ನೀಡಿ ಎಂದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಜೈಲಿನ ಕೈಪಿಡಿಯಲ್ಲಿ ಇರುವಂತೆ ಬಟ್ಟೆ ಧರಿಸಲು ಸೂಚನೆ ನೀಡಿತು.

ಅಂದಹಾಗೆ, ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ್ರಪಿಲ್​ 9ರಂದೇ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ತಾಂತ್ರಿಕ ಕಾರಣ ಹಾಗೂ ತೀರ್ಪು ಸಿದ್ಧಪಡಿಸುವಲ್ಲಿನ ವಿಳಂಬದಿಂದಾಗಿ ಅಂತಿಮ ತೀರ್ಪು ಪ್ರಕಟ ದಿನಾಂಕವನ್ನು ಏ್ರಪಿಲ್​ 15ಕ್ಕೆ ಮುಂದೂಡಲಾಗಿತ್ತು. ಅದರಂತೆ ಬುಧವಾರ ದೋಷಿ ಎಂದು ತೀರ್ಪು ನೀಡಿದ ಕೋರ್ಟ್​ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.

ಪ್ರಕರಣದ ಹಿನ್ನೆಲೆ ಏನು?
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣವು ಕರ್ನಾಟಕ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಘಟನೆಯಾಗಿದೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಕೊಲೆಗೆ ರಾಜಕೀಯ ದ್ವೇಷವೇ ಮುಖ್ಯ ಕಾರಣ ಎಂಬ ಆರೋಪಗಳು ಆರಂಭದಿಂದಲೂ ಕೇಳಿಬಂದಿದ್ದವು.

ಈ ಪ್ರಕರಣದ ಪ್ರಮುಖ ತಿರುವು ಎಂದರೆ ಕಾಂಗ್ರೆಸ್ ಪ್ರಭಾವಿ ನಾಯಕ ವಿನಯ್ ಕುಲಕರ್ಣಿ ಅವರ ಬಂಧನ. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು, ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ (CBI) ತನಿಖೆಗೆ ವಹಿಸಲಾಯಿತು. ಸಿಬಿಐ ತನಿಖೆಯ ವೇಳೆ ವಿನಯ್ ಕುಲಕರ್ಣಿ ಅವರು ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಉಲ್ಲೇಖಿಸಿ, 2020ರಲ್ಲಿ ಅವರನ್ನು ಬಂಧಿಸಲಾಯಿತು. ಸುಮಾರು ಒಂಬತ್ತು ತಿಂಗಳುಗಳ ಕಾಲ ಅವರು ಜೈಲು ಶಿಕ್ಷೆ ಅನುಭವಿಸಿದ್ದರು.

ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಪ್ರಕಾರ, ಯೋಗೀಶ್ ಗೌಡ ಮತ್ತು ವಿನಯ್ ಕುಲಕರ್ಣಿ ನಡುವೆ ಜಮೀನು ವಿಚಾರ ಹಾಗೂ ರಾಜಕೀಯ ಪ್ರಾಬಲ್ಯಕ್ಕೆ ಸಂಬಂಧಿಸಿದಂತೆ ತೀವ್ರ ಭಿನ್ನಾಭಿಪ್ರಾಯಗಳಿದ್ದವು. ಇದೇ ದ್ವೇಷದಿಂದಾಗಿ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲು ವಿನಯ್ ಕುಲಕರ್ಣಿ ಸುಪಾರಿ ನೀಡಿದ್ದರು ಮತ್ತು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂಬ ಗಂಭೀರ ಆರೋಪಗಳನ್ನು ಹೊರಿಸಲಾಯಿತು.

ಈ ಘಟನೆಗೆ ಮುನ್ನ ಮತ್ತು ಘಟನೆ ನಂತರ ವಿನಯ್​ ಕುಲಕರ್ಣಿ ದೆಹಲಿಗೆ ಪ್ರವಾಸ ಮಾಡಿದ್ದರು. ಘಟನೆ ವೇಳೆ ತಾನು ಜಿಲ್ಲಾ ಕೇಂದ್ರದಲ್ಲಿ ಇರಲೇ ಇಲ್ಲ. ರಾಜಧಾನಿ ಮತ್ತು ದೆಹಲಿ ಮಧ್ಯೆ ಪ್ರವಾಸ ಮಾಡುತ್ತಾ ಏನೋ ಪ್ರಮುಖ ಕೆಲಸದಲ್ಲಿ ತೊಡಗಿಕೊಂಡಿದ್ದೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪವಿದೆ. 2016ರ ಜೂ. 12ರಂದು ದೆಹಲಿಗೆ ತೆರಳಿದ್ದ ಕುಲಕರ್ಣಿ 13ರಂದು ಬೆಂಗಳೂರಿಗೆ ವಾಪಸಾಗಿದ್ದರು. ಜೂ. 16ರಂದು ಪುನಃ ದೆಹಲಿಗೆ ತೆರಳಿ 18ರಂದು ರಾಜಧಾನಿಗೆ ವಾಪಸಾಗಿದ್ದರು. ಪ್ರಯಾಣದ ದಿನವೇ ವಿಮಾನ ಟಿಕೆಟ್​ ಪಡೆಯಲಾಗಿತ್ತು ಎಂಬುದನ್ನು ಸಿಬಿಐ ದಾಖಲೆ ಸಹಿತವಾಗಿ ಖಚಿತ ಪಡಿಸಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು.

ಸಿಬಿಐ ತನಿಖೆಯ ನಂತರ 2020ರಲ್ಲಿ ಬಂಧನವಾಗಿ ಜೈಲು ಸೇರಿದ ವಿನಯ್​ ಕುಲಕರ್ಣಿ ಅವರು, 2021ರ ಆಗಸ್ಟ್‌ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದರು. ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಆರೋಪದ ಮೇಲೆ ಸಿಬಿಐ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಾದ ಬಳಿಕ 2025ರ ಜೂನ್ 6ರಂದು ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿತು. ಅದರಂತೆ ಜೂನ್ 14ರಂದು ವಿನಯ್ ಕುಲಕರ್ಣಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಶರಣಾದರು. ಈ ವೇಳೆ ಅವರನ್ನು ಸಿಬಿಐ ವಶಕ್ಕೆ ಪಡೆಯಿತು. ಬಳಿಕ ವಿನಯ್​ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

ಜೈಲು ಸೇರಿದ ನಂತರ ವಿನಯ್ ಕುಲಕರ್ಣಿ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, 2026ರ ಜನವರಿ 27ರಂದು ಹೈಕೋರ್ಟ್ ಅರ್ಜಿ ವಜಾಗೊಳಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ಮನವಿ ಮಾಡುವಂತೆ ಸೂಚಿಸಿತು. ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. 2026ರ ಫೆಬ್ರವರಿ 27ರಂದು ಜಾಮೀನು ಅನುಮೋದನೆಯಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಇದೀಗ ಜೀವಾವಧಿ ಶಿಕ್ಷೆ ಪ್ರಕಟವಾಗಿದ್ದು ಮತ್ತೆ ಜೈಲುಪಾಲಾಗಿದ್ದಾರೆ.

Leave a Reply

Your email address will not be published. Required fields are marked *