Greater Bengaluru News9 : ಬೆಂಗಳೂರು ರಾಜಕೀಯ ವಲಯದಲ್ಲಿ ಬ್ರೇಕ್ಫಾಸ್ಟ್ ಸಭೆ ವೇಳೆ ನಾಟಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಸಭೆಯಲ್ಲಿ ಮಾತನಾಡಿದ ಸಿಎಂ, “ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಹೈಕಮಾಂಡ್ ಹೇಳಿದುದನ್ನು ಪಾಲಿಸುವುದು ನನ್ನ ಕರ್ತವ್ಯ” ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿಂದಿನ ಒಪ್ಪಂದ ಸೂತ್ರಗಳ ಕುರಿತು ಸಹ ಅವರು ಸಂಪುಟ ಸಹೋದ್ಯೋಗಿಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡದ ಸಿದ್ದರಾಮಯ್ಯ, “ಈ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಭೆಗೆ ಮೊದಲು ಡಿಕೆಶಿ ಅವರು ಸಿಎಂ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ ಎನ್ನಲಾಗುತ್ತಿದೆ.
ಸಭೆಯ ನಂತರ ಸಂಪುಟದಲ್ಲಿ ಗಂಭೀರ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿದಿದೆ.


