BBMP
Loading ...

DK Shivakumar Cabinet

Greater Bengaluru News9 : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಪುನಾರಚನೆಯದ್ದೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಸುಮಾರು 17ರಿಂದ 20 ಮಂದಿಗೆ ಈ ಬಾರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಂಪುಟದಲ್ಲಿ ಸ್ಥಾನ ಸಿಗದಿರುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಕತೆ ಜೋರಾಗಿದೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೇವಲ 10ರಿಂದ 12 ಮಂದಿ ಹಿರಿಯ ಸಚಿವರಿಗಷ್ಟೇ ಮರುಅವಕಾಶ ಸಿಗುವ ಸಾಧ್ಯತೆ ಇದ್ದು, ಉಳಿದವರಿಗೆ ಹೈಕಮಾಂಡ್ ಹೊಸ ಮುಖಗಳಿಗೆ ಅವಕಾಶ ನೀಡುವ ಚಿಂತನೆಯಲ್ಲಿದೆ ಎನ್ನಲಾಗಿದೆ. ವಿಶೇಷವಾಗಿ ಬೆಂಗಳೂರು ಭಾಗದ ಕೆಲ ಪ್ರಭಾವಿ ಸಚಿವರಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತಮ್ಮ ಆಪ್ತ ವಲಯದ ನಾಯಕರಿಗೆ ಅವಕಾಶ ಕಡಿಮೆಯಾಗುವ ಸಾಧ್ಯತೆ ಎದುರಾಗಿರುವ ಹಿನ್ನೆಲೆ ಸಿದ್ದರಾಮಯ್ಯ ಕೂಡ ಎಚ್ಚರಿಕೆಯಿಂದ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಬೆಂಬಲಿಗರಲ್ಲಿ ಕನಿಷ್ಠ 6 ರಿಂದ 7 ಮಂದಿಗಾದರೂ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಮುಂದೆ ಅವರು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿ ಸಚಿವ ಸಂಪುಟ ರಚನೆ ಮೂರು ಪ್ರಮುಖ ಸಮೀಕರಣಗಳ ಆಧಾರದ ಮೇಲೆ ನಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಬೆಂಬಲಿಗರು, ಡಿ.ಕೆ. ಶಿವಕುಮಾರ್ ಆಪ್ತರು ಹಾಗೂ ಹೈಕಮಾಂಡ್ ಒಲವು ಪಡೆದ ನಾಯಕರು ಎಂಬ ಮೂರು ವಲಯಗಳಲ್ಲಿ ಸಚಿವ ಸ್ಥಾನ ಹಂಚಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಇದಲ್ಲದೆ, ದೆಹಲಿ ಹೈಕಮಾಂಡ್ ನೇರವಾಗಿ ಆಯ್ಕೆ ಮಾಡುವ ಸುಮಾರು 20 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಯುವ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶ ಕಾಂಗ್ರೆಸ್ ನಾಯಕರದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಕೆಲ ಹಿರಿಯ ಸಚಿವರಿಗೆ ಈ ಬಾರಿಯೂ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಅಥವಾ ಶರಣ ಪ್ರಕಾಶ್ ಪಾಟೀಲ್, ಡಾ.ಜಿ. ಪರಮೇಶ್ವರ್, ಶಿವರಾಜ ತಂಗಡಗಿ, ಕೆ.ಎಚ್. ಮುನಿಯಪ್ಪ, ಮಂಕಾಳ್ ವೈದ್ಯ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

Leave a Reply

Your email address will not be published. Required fields are marked *