Greater Bengaluru News9 : ಜಿಬಿಎ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾಡರಹಳ್ಳಿ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿದ್ದು, ಹಲವು ರೌಡಿಶೀಟರ್‌ಗಳ ಮನೆಗಳ ಮೇಲೆ ತಡರಾತ್ರಿ ದಾಳಿ ನಡೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದ ರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದಂಧೆ ಶಿವ, ಹರೀಶ್, ಸಂದೀಪ್ ಅಲಿಯಾಸ್ ಹೇರೋಹಳ್ಳಿ ದೀಪು, ಮುಬಾರಕ್ ಸೇರಿದಂತೆ ಹಲವು ಕುಖ್ಯಾತ ರೌಡಿಗಳ ನಿವಾಸಗಳನ್ನು ಏಕಕಾಲದಲ್ಲಿ ಪರಿಶೀಲಿಸಲಾಯಿತು.
ಮುಂಬರುವ ಜಿಬಿಎ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆ, ಬೆದರಿಕೆ, ಗಲಾಟೆ ಅಥವಾ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಚುನಾವಣಾ ಅವಧಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯ ಚಟುವಟಿಕೆಗಳಲ್ಲಿ ತೊಡಗಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಷ್ಟೇ ಅಲ್ಲದೆ, ಚುನಾವಣೆಗೆ ಮಾತ್ರ ಸೀಮಿತವಾಗದೇ ಯಾವುದೇ ಸಿವಿಲ್ ವಿವಾದಗಳು, ಕ್ರಿಮಿನಲ್ ಪ್ರಕರಣಗಳು ಅಥವಾ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ.
ಮನೆಗಳ ಪರಿಶೀಲನೆ ವೇಳೆ ಯಾವುದೇ ಮಾರಕಾಸ್ತ್ರಗಳು ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಸಮಾಜಘಾತುಕ ಶಕ್ತಿಗಳಿಗೆ ಎಚ್ಚರಿಕೆ ನೀಡುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಇಂತಹ ಕ್ರಮಗಳಿಂದ ಚುನಾವಣೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ನೆರವಾಗಲಿದೆ ಎಂಬ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.


