Greater Bengaluru news9 : ರಾಜಧಾನಿ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ತಾಯಿ, ಅಜ್ಜಿ ಹಾಗೂ ಮಾವನನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂಬಾತ, ತನ್ನ ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ್ ಅವರನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ತಂದೆ ಚಿಕ್ಕಣ್ಣ, ನಾನು ಮನೆಯಲ್ಲಿ ಇದ್ದಿದ್ದರೆ ನನ್ನನ್ನೂ ಕೊಂದುಬಿಡುತ್ತಿದ್ದ. ಅವನಿಗೆ ಯಾವುದೇ ಮಾನಸಿಕ ಸಮಸ್ಯೆ ಇರಲಿಲ್ಲ.
ಡ್ರೈವಿಂಗ್ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆ ರಾತ್ರಿ ಎಲ್ಲವೂ ಸಹಜವಾಗಿತ್ತು. ಬೆಳಿಗ್ಗೆ ನಾನು ಕೆಲಸಕ್ಕೆ ಹೋಗಿದ್ದೆ. ಮನೆಯಲ್ಲಿ ಯಾವುದೇ ಗಲಾಟೆ ನಡೆದಿರಲಿಲ್ಲ. ಹೀಗೇಕೆ ಮಾಡಿದ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ. ರಾತ್ರಿ ಯಾವುದೇ ಜಗಳವಾಗಿದ್ದರೆ ನಾನು ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
ಪ್ರಶಾಂತ್ ಈ ಕೃತ್ಯಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸರು ಘಟನೆಯ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.


