Greater Bengaluru News9 : ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ 10 ಮಂದಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಿರಣ್ (34), ಬಸವರಾಜ್ (28), ರಂಜಿತ್ (19), ರಂಗಸ್ವಾಮಿ (49), ಮುಜಾಹಿದಾ ಅಹಮದ್ (39), ಕೊಟ್ರೇಶ್ (26), ಪರಶುರಾಮ್ (27), ರಘು (28), ಪಾರ್ಥೀಬನ್ (23) ಹಾಗೂ ಭರತ್ (24) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಸ್ಥಳೀಯ ಸಂಘಟನೆಗಳ ಕೆಲ ಸದಸ್ಯರು ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.
ಕಾರ್ಯಾಚರಣೆಯ ವೇಳೆ ಪಾಲಿಕೆಯ ಇಂಜಿನಿಯರ್ಗಳು ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದು, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿರುವ ಆರೋಪವೂ ಕೇಳಿಬಂದಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆಯನ್ನು ಕೆಲಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಜಿಬಿಎ ಅಧಿಕಾರಿಗಳು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ 10 ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನ್ಯಾಯಾಲಯದ ಆದೇಶದಂತೆ ನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಬಂಧಿತರ ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


