Greater Bengaluru News9: ರಾಷ್ಟ್ರ ರಾಜಧಾನಿಯ ಕಟ್ಟುನಿಟ್ಟಿನ ಭದ್ರತಾ ವಲಯವಾದ ಲೋಕ ಕಲ್ಯಾಣ ಮಾರ್ಗದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಪಟ್ಟ ಹರಸಾಹಸದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಪ್ರತಿಭಟನಾ ನಿರತರನ್ನು ಪೊಲೀಸರು ಬಲವಂತವಾಗಿ ಬಸ್ಗಳಿಗೆ ಹತ್ತಿಸಿ ವಶಕ್ಕೆ ಪಡೆಯುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವೇಳೆ ವಶಕ್ಕೆ ಒಳಗಾದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪೋಲಿಸ್ ವಾಹನದಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, “ಅವರು ಹೇಡಿಗಳು. ಸರ್ಕಾರದವರು ಭೀತರಾಗಿದ್ದಾರೆ. ನಾವು ಅವರಿಗೆ ಎಂದಿಗೂ ಹೆದರುವುದಿಲ್ಲ. ಬದಲಿಗೆ ಅವರೇ ನಮಗೆ ಹಾಗೂ ದೇಶದ ಯುವಕರ ಧ್ವನಿಗೆ ಹೆದರುತ್ತಿದ್ದಾರೆ,” ಎಂದು ಕಿಡಿಕಾರಿದರು.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಮುಂಭಾಗದಲ್ಲೇ ಧರಣಿ ಕುಳಿತಿದ್ದ ನಾಯಕರನ್ನು ಪೊಲೀಸರು ತೆರವುಗೊಳಿಸಲು ಮುಂದಾದಾಗ ದೆಹಲಿಯಲ್ಲಿ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಪ್ರದೇಶವನ್ನು ಸುತ್ತುವರಿದು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಿ ಕರೆದೊಯ್ದಿದ್ದಾರೆ.


