Greater Bengaluru News9 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಲೋಕಭವನದ ಗಾಜಿನ ಮನೆಯಲ್ಲಿ ನಾಳೆ ಮಧ್ಯಾಹ್ನ 2 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದ ಅಂತಿಮ ಹಂತದ ಕಸರತ್ತಿನ ಬಳಿಕ ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದ್ದು, ಬುಧವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಲು ಸಿದ್ಧತೆಗಳು ನಡೆದಿವೆ. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕಾರ್ಯದರ್ಶಿ ಅವರು ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಸಮಾರಂಭದ ವೇದಿಕೆ, ಆಸನ ವ್ಯವಸ್ಥೆ ಸೇರಿದಂತೆ ಇತರ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.


