BBMP
Loading ...

POP

Greater Bengaluru News9 : ರಾಜ್ಯದಲ್ಲಿ ಸೆಪ್ಟೆಂಬರ್ 14ರಂದು ನಡೆಯಲಿರುವ ಗಣೇಶೋತ್ಸವ ಹಿನ್ನೆಲೆಯಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ, ಬಣ್ಣ ರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಬಗ್ಗೆ ಜಾಗೃತಿ ಮೂಡಿಸಲು ಪಂಚಾಯಿತಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಣೇಶೋತ್ಸವದ ವೇಳೆ ಶಬ್ದ ಮಾಲಿನ್ಯ ನಿಯಂತ್ರಣಕ್ಕೂ ಒತ್ತು ನೀಡಿರುವ ಸಚಿವರು, ಕಾನೂನು ಪ್ರಕಾರ ನಿಗದಿತ ಡೆಸಿಬಲ್ ಮಿತಿಯೊಳಗಿನ ಧ್ವನಿವರ್ಧಕಗಳನ್ನು ಮಾತ್ರ ಬಳಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

2023ರ ಸೆಪ್ಟೆಂಬರ್ 15ರಂದು ಹೊರಡಿಸಲಾದ ಸರ್ಕಾರಿ ಆದೇಶದಂತೆ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಹಾಗೂ ವಿಸರ್ಜನೆ ಈಗಾಗಲೇ ನಿಷೇಧಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಹೈಕೋರ್ಟ್ ಕೂಡ ನಿರ್ದೇಶನ ನೀಡಿರುವುದರಿಂದ ಎಲ್ಲ ಗ್ರಾಮ ಪಂಚಾಯಿತಿಗಳು ಜಲಮೂಲಗಳ ಹಾಗೂ ಪರಿಸರ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಪಿಒಪಿ ಮೂರ್ತಿಗಳಲ್ಲಿ ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಸೇರಿದಂತೆ ಹಲವು ರಾಸಾಯನಿಕ ಅಂಶಗಳಿದ್ದು, ಅವುಗಳ ಮೇಲೆ ಲೇಪಿಸುವ ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇತರೆ ಭಾರ ಲೋಹಯುಕ್ತ ಬಣ್ಣಗಳು ಪರಿಸರ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ಇಂತಹ ಮೂರ್ತಿಗಳನ್ನು ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದರೆ ನೀರು ಕಲುಷಿತವಾಗುವುದರ ಜೊತೆಗೆ ಜಲಚರಗಳ ಜೀವಕ್ಕೂ ಅಪಾಯ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *