ಬೆಂಗಳೂರು : ರಾಜ್ಯದಲ್ಲಿ ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ನಾಳೆಯ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.
ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೊದಲನೇ ದಿನ ಜೂನ್ 28ರ ನಾಳೆಯಂದು ಪೋಲಿಯೋ ಬೂತ್ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.


