ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಮ್ಯಾನೇಜ್ಮೆಂಟ್ನ ಮೂವರು ಆಯೋಜಕರನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆರ್ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಡಿಸಿಪಿ, ಎಸಿಪಿ, ಕಬ್ಬನ್ಪಾರ್ಕ್ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್ಸಿಬಿ ಸೇರಿ ಡಿಎನ್ಎ ಹಾಗೂ ಕೆಎಸ್ಸಿಎ ಮುಖ್ಯಸ್ಥರನ್ನು ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ ನಡೆದ ತುರ್ತು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ತನಿಖೆಗೆ ಆದೇಶ
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಮೈಕೆಲ್ ಕುನ್ಹಾರ ಆಯೋಗಕ್ಕೆ 30 ದಿನ ಗಡುವು ನೀಡಲಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ನಿರ್ಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕದಾಗಿನಿಂದ ಸಿಎಂ ಆದ ಇಲ್ಲಿಯವರಿಗೆ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜತೆ ಸರ್ಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು
* ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
* ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್
* ಕೇಂದ್ರ ವಿಭಾಗದ ಡಿಸಿಪಿ ಶೇಖರ್
* ಕಬ್ಬನ್ ಪಾಕ್೯ ಎಸಿಪಿ ಬಾಲಕೃಷ್ಣ
* ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್ ಮತ್ತು ಸಿಬ್ಬಂದಿ
ನಡೆದಿದ್ದೇನು?
ಮಂಗಳವಾರ (ಜೂನ್ 03) ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ, ಬುಧವಾರ (ಜೂನ್ 04) ಅಹಮದಾಬಾದ್‌ನಿಂದ ತಮ್ಮ ತವರು ಮೈದಾನಕ್ಕೆ ಆರ್ಸಿಬಿ ತಂಡ ಹಿಂತಿರುಗಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂಬ ಸುದ್ದಿ ಕೇಳಿ ಲಕ್ಷಾಂತರ ಅಭಿಮಾನಿಗಳು ಸ್ಟೇಡಿಯಂಗೆ ಜಮಾಯಿಸಿದರು. ಇತ್ತ ಸರ್ಕಾರದಿಂದ ವಿಧಾನಸೌಧದ ಮೆಟ್ಟಿಲುಗಳಲ್ಲಿ ಆರ್ಸಿಬಿ ತಂಡ ಸನ್ಮಾನ ಸ್ವೀಕರಿಸಿದರೆ, ಅತ್ತ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಘೋರ ದುರಂತ ಸಂಭವಿಸಿತು.
ಒಂದೇ ಕಡೆ ಲಕ್ಷಾಂತರ ಮಂದಿ ಜಮಾಯಿಸಿದ್ದರು. ಅಲ್ಲದೆ, ಯಾವುದೇ ಪೂರ್ವ ಸಿದ್ಧತೆ ಇರಲಿಲ್ಲ. ಸ್ಥಳದಲ್ಲಿ ಮೆಡಿಕಲ್ ವ್ಯವಸ್ಥೆಯು ಇರಲಿಲ್ಲ. ಸುಮಾರು 2 ಲಕ್ಷ ಅಭಿಮಾನಿಗಳು ಜಮಾಯಿಸಿದ್ದರು ಎನ್ನಲಾಗಿದೆ. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಲ್ಲದೆ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಇದೊಂದು ಕರಾಳ ಘಟನೆಯಾಗಿದೆ. ಐಪಿಎಲ್ಗೆ ಇದೊಂದು ಕಪ್ಪು ಚುಕ್ಕಿ ಎಂದರೆ ತಪ್ಪಾಗಲಾರದು. ಈ ಘಟನೆಯ ಬಗ್ಗೆ ಕೇಳಿ ಸಚಿನ್, ಅನೀಲ್ ಕುಂಬ್ಳೆ ಸೇರಿದಂತೆ ಅನೇಕ ದಿಗ್ಗಜರು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಸಹ ಸಂತಾಪ ಸೂಚಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಹ ಸಂತಾಪ ವ್ಯಕ್ತಪಡಿಸಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಸಹ ಘೋಷಿಸಿದೆ. ಅದೇ ರೀತಿ, ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದರೊಂದಿಗೆ ಆರ್ಸಿಬಿ ಮ್ಯಾನೇಜ್ಮೆಂಟ್ ಮೂಲ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದೆ.
ಕಾಲ್ತುಳಿತ ಪ್ರಕರಣ: ನ್ಯಾ.ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗದಿಂದ ತನಿಖೆ : ಸಿಎಂ ಸಿದ್ದರಾಮಯ್ಯ


