Greater Bengaluru News9 : ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.
ಸುಮಾರು 9 ರಿಂದ 10 ಲಕ್ಷ ಲಾಡುಗಳನ್ನು ತಯಾರಿಸಲಾಗುತ್ತಿದ್ದು, ನೆಲಮಂಗಲ ತಾಲೂಕಿನ 80 ರಿಂದ 90 ಸಾವಿರ ಮನೆಗಳಿಗೆ ಲಾಡು ಬಾಕ್ಸ್ ವಿತರಿಸಲು ಯೋಜನೆ ರೂಪಿಸಲಾಗಿದೆ. ನೆಲಮಂಗಲ ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಲಾಡು ತಯಾರಿ ಕಾರ್ಯ ನಡೆಯುತ್ತಿದೆ. ಸುಮಾರು 250 ರಿಂದ 300 ಮಂದಿ ಬಾಣಸಿಗರಿಂದ ಲಾಡು ತಯಾರಿಸಲಾಗುತ್ತಿದೆ.
ಲಾಡುಗಳ ತಯಾರಿಕೆ ಮತ್ತು ಶುಚಿತ್ವ ಕ್ರಮಗಳನ್ನು ಶಾಸಕ ಶ್ರೀನಿವಾಸ್ ಪರಿಶೀಲನೆ ನಡೆಸಿದ್ದು, ಯಾವುದೇ ಕೊರತೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಸಂತಸದಲ್ಲಿ ತಾಲೂಕಿನ ಪ್ರತಿ ಮನೆಗೂ ಸಿಹಿ ಹಂಚುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳ ಬಳಿಕ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಸಂಜೆ 4:10ಕ್ಕೆ ಅವರು ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಡಿಕೆಶಿ ಜೊತೆಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.


