BBMP
Loading ...

Rain

Greater Bengaluru News9 : ರಾಜ್ಯದ ವಿವಿಧ ಭಾಗಗಳಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯನ್ನು ಪ್ರಕಟಿಸಲಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಲಿದ್ದು, ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಹೆಚ್ಚಿರಲಿದೆ.

ಇದೇ ವೇಳೆ, ಜುಲೈ 26ರಂದು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತದಂತಹ ಸುಳಿ/ತಿರುಗುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರ ಪರಿಣಾಮದಿಂದ ಮುಂದಿನ ಎರಡು-ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ ಇಲಾಖೆ ನಿಗಾವಹಿಸಿದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಗಿನ ಜಾವ ಬಿಸಿಲು ಮತ್ತು ಮೋಡ ಮುಸುಕಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಒಂದೆರಡು ಕಡೆ ಗುಡುಗು ಸಹಿತ ಬಿಟ್ಟು ಬಿಟ್ಟು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗಿದೆ.

ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಕರಾವಳಿಗೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ಮಳೆಯ ಪ್ರಮಾಣ ಕೊಂಚ ಹೆಚ್ಚಿರಲಿದೆ.

ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಬಿಸಿಲಿನ ವಾತಾವರಣವಿದ್ದು, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಈ ಭಾಗದಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಜೋರು ಮಳೆಯ ಮುನ್ಸೂಚನೆ ಇಲ್ಲ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *