Greater Bengaluru News9: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದು, ಅಸಭ್ಯವಾಗಿ ಮಾತನಾಡಿದ್ದಾರೆ. ‘ಚಿನ್ನ, ಮುದ್ದು, ಬಂಗಾರಿ’ ಎಂದು ಕರೆದು, ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವುದಾಗಿ ಆರೋಪಿಸಲಾಗಿದೆ.
ಇದಷ್ಟೇ ಅಲ್ಲದೆ, ಪ್ರಕರಣವನ್ನು ಬಹಿರಂಗಪಡಿಸಿದರೆ ದೂರುದಾರೆಯನ್ನೂ ಅವರ ಮಕ್ಕಳನ್ನೂ ಸುಪಾರಿ ಕೊಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆಯೆಂಬ ಗಂಭೀರ ಆರೋಪವೂ ಮಾಡಲಾಗಿದೆ. ಮನೆಗೆ ಬರುವುದಾಗಿ ಹೇಳಿ ಹಲವಾರು ಬಾರಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಆರೋಪಗಳಿಗೆ ಸಂಬಂಧಿಸಿದಂತೆ ವಾಟ್ಸಪ್ ಮೂಲಕ ಕಳುಹಿಸಿದ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹಾಗೂ ಸಂಭಾಷಣೆಗಳ ಆಡಿಯೋ ದಾಖಲೆಗಳನ್ನು ಸಹ ಸಂತ್ರಸ್ತೆ ಕಮಿಷನರ್ ಕಚೇರಿಗೆ ಸಲ್ಲಿಸಿದ್ದಾರೆ.
ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಿರುವ ಈ ದೂರಿನ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರೆ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರು ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಈ ಘಟನೆ ಮತ್ತೊಮ್ಮೆ ಇಲಾಖೆಯ ನೈತಿಕತೆಯ ಬಗ್ಗೆ ಪ್ರಶ್ನೆ ಎಬ್ಬಿಸಿದೆ.


