ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.
ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು’ ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ.
ಜಿಲ್ಲಾ ಕೇಂದ್ರಗಳಿಂದ ಈ ಸೌಲಭ್ಯಕ್ಕೆ ಆಯ್ಕೆಯಾದ ಪತ್ರಕರ್ತರ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕ್ರೋಢೀಕರಿಸಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ನೀಡಲಾಗುವುದು. ಸದರಿ ಸಂಸ್ಥೆಯು ಮುದ್ರಿಸಿಕೊಡುವ ಬಸ್ಪಾಸ್ ಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾ ಪತ್ರಿಕಾ ಸಂಪಾದಕರಿಗೆ/ವರದಿಗಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಎಲ್ಲಾ ಪ್ರಕ್ರಿಯೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಂಟಿ ನಿರ್ದೇಶಕರು (ಸುಮಪ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಇವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ
ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ವಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ, ಮಾಧ್ಯಮ ಮಾನ್ಯತಾ ಪತ್ರ ಪಡೆಯದ ಪತ್ರಕರ್ತರು, ಅವರು ಕಾರ್ಯನಿರ್ವಹಿಸುವ ಜಿಲ್ಲೆಯ ವ್ಯಾಪ್ತಿಯಲ್ಲಿ ಕರ್ನಾಟಕ ಸಾರಿಗೆ ವ್ಯಾಪ್ತಿಯ (ಎಕ್ಸ್ ಪ್ರೆಸ್ ಸೇರಿದಂತೆ ) ಬಸ್ ಗಳಲ್ಲಿ ಸಂಚರಿಸಲು ಬಸ್ ಪಾಸ್ ಅವಕಾಶ ಕಲ್ಪಿಸಿದೆ.
ಅರ್ಜಿದಾರರು ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ವನ್ನು ಸಲ್ಲಿಸುವುದು.


