BBMP
Loading ...

BMTC

Greater Bengaluru News9 : ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಬೆಂಗಳೂರು ಚಲೋ, ನಾಡಿದ್ದು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣದ ಪ್ಲ್ಯಾನ್ ಅನ್ನು ಸ್ವಲ್ಪ ಮುಂದೂಡಿ, ಇಲ್ಲದಿದ್ದರೆ ಬಸ್ ಸೌಕರ್ಯ ಇಲ್ಲದೆ ಪರದಾಡುವಂತಾಗೀತು.

ಜನವರಿ 2020, ಜನವರಿ 1ರಿಂದ ಫೆಬ್ರವರಿ 28, 2023 ರವರೆಗಿನ ಹಿಂಬಾಕಿ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಾಳೆ ಫೆಬ್ರವರಿ 19ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.

ರಾಜ್ಯ ಸರ್ಕಾರಿ ಬಸ್ ಗಳ ಚಾಲಕರು ಮತ್ತು ನಿರ್ವಾಹಕರು ಸೇರಿದಂತೆ ಇತರ ಸಿಬ್ಬಂದಿ ಈ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮ ಸೇರಿದಂತೆ ಕೆಎಸ್ಆರ್ಟಿಸಿ ಬಸ್ ಸಂಚಾರ ವಿರಳವಾಗಲಿದೆ. ಇಲ್ಲವೆ ಸಂಪೂರ್ಣ ರದ್ದಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಏನಾದರೂ ಬಸ್ ನಲ್ಲಿ ಪ್ರಯಾಣ ಮಾಡುವುದಿದ್ದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.

ಸರ್ಕಾರ ಸ್ಪಂದಿಸದಿದ್ದರೆ ಹೋರಾಟ
ಒಂದು ವೇಳೆ ಬೆಂಗಳೂರು ಚಲೋಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಗುರುವಾರ ಸಂಜೆಯಿಂದ ಬಸ್ ಸಂಚಾರ ರದ್ದಾಗುವ ಸಾಧ್ಯತೆಗಳಿವೆ. ಬಸ್ ಓಡಾಟವನ್ನು ರದ್ದುಗೊಳಿಸಿ ಸಾರಿಗೆ ನೌಕರರು ಶುಕ್ರವಾರದಂದು ನಡೆಯಲಿರುವ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಇದರಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಕೆಕೆಆರ್ ಟಿಸಿ, ಎನ್ ಡಬ್ಲ್ಯೂಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮದ ಸಿಬ್ಬಂದಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಸಾರಿಗೆ ನೌಕರರು ಹಮ್ಮಿಕೊಂಡಿದ್ದಾರೆ. ನಾಳೆ ಸಂಜೆ 4 ಗಂಟೆಯವರೆಗೆ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದ್ದು, ಬೇಡಿಕೆ ಸಂಬಂಧ ನಿರ್ಣಯ ಕೈಗೊಳ್ಳದಿದ್ದರೆ, ಸಾರಿಗೆ ಸಂಚಾರ ಸಂಪೂರ್ಣವಾಗಿ ಬಂದ್ ಆಗುವ ಸಾಧ್ಯತೆಗಳಿವೆ ಎಂದು ರಾಜ್ಯ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ನೌಕರರ ಬೆಂಬಲ
ಸಾರಿಗೆ ನೌಕರರು ನಡೆಸುತ್ತಿರುವ ಬಂದ್ ಎಲ್ಲಾ ವಿಭಾಗದ ನೌಕರರು ಬೆಂಬಲ ಸೂಚಿಸಿದ್ದಾರೆ. ಅದೇ ರೀತಿಯಲ್ಲಿ 2020 ರ ನಂತರ ನಿವೃತ್ತಿಯಾಗಿರುವ ನೌಕರರು ಕೂಡ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬಾಗಶಃ ಬಸ್ ಸಂಚಾರ ಇರುವ ಸಾಧ್ಯತೆಗಳಿವೆ, ಸರ್ಕಾರ ಬೇಡಿಕೆ ಈಡೇರಿಸದಿದ್ದಲ್ಲಿ ಸಂಪೂರ್ಣ ಬಂದ್ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಪ್ರಯಾಣಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅತೀ ಅವಶ್ಯಕವಾಗಿದೆ.

ಕೆಎಸ್ಆರ್ ಟಿಸಿ ಶಿಸ್ತು ಕ್ರಮದ ಎಚ್ಚರಿಕೆ
ಇದರ ನಡುವೆ ಕೆಎಸ್ ಆರ್ ಟಿಸಿ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಕೆಲಸಕ್ಕೆ ಹಾಜರಾಗದಿದ್ದರೆ ಅವರ ವೇತನ ನೀಡಲ್ಲ ಎಂದು ಎಚ್ಚರಿಕೆ ನೀಡಿದೆ. ಅದೇ ರೀತಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರ ವಿರುದ್ದ ಸೇವಾ ನಿಯಮದ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆ ಎಂಡಿ ಅಕ್ರಮ್ ಪಾಷಾ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ತೊಂದರೆ
ರಾಜ್ಯ ಸರ್ಕಾರ ಮತ್ತು ರಾಜ್ಯ ಸಾರಿಗೆ ನಿಗಮದ ಸಿಬ್ಬಂದಿಗಳ ನಡುವಿನ ತಿಕ್ಕಾಟದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಸಮಯಕ್ಕೆ ಸರಿಯಾಗಿ ಬಸ್ ಬಾರದಿದ್ದಲ್ಲಿ ಅವರು ಕಚೇರಿಗೊ ಅಥವಾ ತುರ್ತು ಕೆಲಸಕ್ಕೆ ತೆರಳಲಾರದ ಸ್ಥಿತಿ ಬರಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಏನೇ ಆದರೂ, ನಾಳೆ ಮತ್ತು ನಾಡಿದ್ದು ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವವರು ಎಚ್ಚರಿಕೆಯಿಂದ ಪ್ರಯಾಣ ಮಾಡಬೇಕಾಗಿದೆ. ಪರ್ಯಾಯ ವ್ಯವಸ್ಥೆಯನ್ನು ಮುಂಚಿತವಾಗಿ ಮಾಡಿಕೊಳ್ಳುವುದು ಸೂಕ್ತ ಎಂದಿದ್ದಾರೆ ಅನೇಕ ಪ್ರಯಾಣಿಕರು.

Leave a Reply

Your email address will not be published. Required fields are marked *