Greater Bengaluru News9 : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ದುರ್ಬಳಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಬಳಿಕ ಇದೀಗ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಗೆ ಮುಂದಾಗಿದೆ. ಮನೆಗಳಿಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.
ಮೂಲಗಳ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಪರಿಷ್ಕರಣೆ ಸಂಬಂಧ ವಿದ್ಯುತ್ ಇಲಾಖೆಗೆ ನಿಖರ ಮಾನದಂಡಗಳನ್ನು ಸರ್ಕಾರ ಪ್ರಕಟಿಸಬಹುದು ಎಂದು ಹೇಳಲಾಗಿದೆ.
ಪ್ರಸ್ತುತ ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಸುಮಾರು 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ. ಈ ಯೋಜನೆಗಾಗಿ ಸರ್ಕಾರ ಪ್ರತಿ ತಿಂಗಳು ಸುಮಾರು 440 ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಗೃಹಬಳಕೆಯ ಹೆಸರಿನಲ್ಲಿ ಕೆಲವರು ವಾಣಿಜ್ಯ ಚಟುವಟಿಕೆಗಳಿಗೆ ಉಚಿತ ವಿದ್ಯುತ್ ಬಳಸುತ್ತಿರುವ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಆಧಾರ್, ಇ-ಕೆವೈಸಿ ಹಾಗೂ ಮೊಬೈಲ್ ಸಂಖ್ಯೆ ಆಧರಿಸಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಈ ಪ್ರಕ್ರಿಯೆಗೆ ಅವಕಾಶ ಕಲ್ಪಿಸುವ ಸಾಧ್ಯತೆಯೂ ಇದೆ.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕರ್ನಾಟಕದ ಅರ್ಹ ಫಲಾನುಭವಿಗಳಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು. ಈ ಹಿಂದೆ ತಪ್ಪು ಮಾಹಿತಿಯಿಂದ ಕೆಲವರ ಖಾತೆಗೆ ಹಣ ಜಮೆಯಾಗುತ್ತಿರುವ ಪ್ರಕರಣಗಳು ಕಂಡುಬಂದಿವೆ. ಆದ್ದರಿಂದ ನಿಜವಾದ ಫಲಾನುಭವಿಗಳ ಖಾತೆಗೆ ನೇರವಾಗಿ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, “ಬಿಜೆಪಿ ಕಾರ್ಯಕರ್ತರಿಗೆ ಗ್ಯಾರಂಟಿ ಬೇಡ ಎಂದು ಅಭಿಯಾನ ನಡೆಸಲಿ. ಆದರೆ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.


