ಬೆಂಗಳೂರು ರೈಲು ನಿಲ್ದಾಣದಲ್ಲಿ ಬೆಂಗಳೂರು ಹಾಗೂ ಬೆಳಗಾವಿ ಸೇರಿ ಏಕಕಾಲದಲ್ಲಿ 3 ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ ಬೆನ್ನಲ್ಲೇ ರಾಜಧಾನಿ ಜನತೆಯ ಬಹುದಿನಗಳ ಕನಸಾದ ಹಳದಿ ಮಾರ್ಗದ ನಮ್ಮ ಮೆಟ್ರೋಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಕೆಎಸ್ಆರ್ ರೈಲು ನಿಲ್ದಾಣದಿಂದ ರಸ್ತೆ ಮಾರ್ಗದ ಮೂಲಕ ಆರ್ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ 12 ರಿಂದ 12.30 ರ ನಡುವೆ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾಥ್ ನೀಡಿದರು.
ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ರಾಗಿಗುಡ್ಡದಿಂದ ಬೊಮ್ಮಸಂದ್ರದವರೆಗೆ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದರು. ಈ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಾಥ್ ನೀಡಿದರು. ಮೋದಿ ಅವರು 8 ಮಕ್ಕಳು, 16 ವಿದ್ಯಾರ್ಥಿಗಳು ಹಾಗೂ ಮೆಟ್ರೋ ಕಾರ್ಮಿಕರ ಜೊತೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಅವರೊಂದಿಗೆ ಮಾತುಕತೆ ಕೂಡ ನಡೆಸಿದರು.
ಆರ್ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಾಗಲಿರುವ ಹಳದಿ ಮೆಟ್ರೋ ಮಾರ್ಗ 19.15 ಕಿ.ಮೀ ಉದ್ದವಿದೆ. ಈ ಮಾರ್ಗದ ನಡುವೆ 16 ಸ್ಟೇಷನ್ ಬರಲಿದ್ದು, ಇದನ್ನು 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
3 ವಂದೇ ಭಾರತ್ ರೈಲುಗಳಿಗೆ ಚಾಲನೆ
ಇಂದು (ಆಗಸ್ಟ್ 08) ಬೆಳಗ್ಗೆ 10.30ರ ಸುಮಾರಿಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ಕಾರಿನ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಬೆಂಗಳೂರು- ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಹಸಿರು ಬಾವುಟ ಹಾರಿಸುವ ಮೂಲಕ ರೈಲು ಪ್ರಯಾಣಕ್ಕೆ ಚಾಲನೆ ನೀಡಿದರು.
ಇದೇ ವೇಳೆ ವರ್ಚುವಲ್ ಆಗಿ ಅಮೃತ್ಸರ್- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)- ಪುಣೆಯ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೂ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ರೈಲ್ವೆ ಸಚಿವಾಲಯದ ರಾಜ್ಯ ಸಚಿವ ವಿ. ಸೋಮಣ್ಣ ಉಪಸ್ಥಿತರಿದ್ದರು.
ಇದೇ ವೇಳೆ ವಂದೇ ಭಾರತ್ ರೈಲಿನ ಒಳಗೆ ಹೆಜ್ಜೆ ಹಾಕಿ, ಮಕ್ಕಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಇಡೀ ಕಾರ್ಯಕ್ರಮದ ವೇಳೆ ಕೆಎಸ್ಆರ್ ನಿಲ್ದಾಣದಲ್ಲಿ ಹಬ್ಬದ ವಾತಾವರಣ ಮೂಡಿತ್ತು. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ, ಹಳದಿ ಮಾರ್ಗದ ಮೆಟ್ರೋ ರೈಲಿಗೆ ಚಾಲನೆ ನೀಡಲು ಜೆಪಿ ನಗರದತ್ತ ಸಾಗಿದರು.


