Greater Bengaluru News9 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪರ್ಧೆಯಲ್ಲಿ ಯಾವುದೇ ಪ್ರತಿಸ್ಪರ್ಧಿ ಅಭ್ಯರ್ಥಿಗಳು ಇಲ್ಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮೂವರು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್ ಮತ್ತು ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.
ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿ ಎಂ. ನಾಗರಾಜ್, ಈ ಅವಕಾಶ ನೀಡಿದ ಪಕ್ಷದ ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ವರಿಷ್ಠರಿಗೆ ಧನ್ಯವಾದ ತಿಳಿಸಿದ ಅವರು, ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದು, ತಮ್ಮ ಮೇಲೆ ಇಟ್ಟಿರುವ ನಿರೀಕ್ಷೆ ಮತ್ತು ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪವನ್ ಖೇರಾ ಸಂತಸ ವ್ಯಕ್ತಪಡಿಸಿ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಹೇಳುವ ಮೂಲಕ ಕನ್ನಡಿಗರೊಂದಿಗೆ ಇನ್ನಷ್ಟು ನಿಕಟ ಸಂಪರ್ಕ ಸಾಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಿಲ್ಲದ ಕಾರಣ ಮತದಾನದ ಅಗತ್ಯ ಉಂಟಾಗದೇ, ನಾಲ್ವರು ಅಭ್ಯರ್ಥಿಗಳ ಆಯ್ಕೆಯು ಅವಿರೋಧವಾಗಿ ಅಂತಿಮಗೊಂಡಿದೆ. ಈ ಮೂಲಕ ಕರ್ನಾಟಕದಿಂದ ಮೇಲ್ಮನೆಗೆ ತೆರಳಲಿರುವ ಹೊಸ ಸದಸ್ಯರ ಆಯ್ಕೆ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿದೆ.


