ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ. ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ.
ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ದರ್ಶನ್ ಪ್ರರಕಣದ ತನಿಖೆ ಮಾಡುತ್ತಿದ್ದರು. ಇವರನ್ನು ಇಂದು ದಿಢೀರ್ ಬದಲಾಣೆ ಮಾಡಿದ್ದು, ಅವರ ಜಾಗಕ್ಕೆ ವಿಜಯನಗರ ಉಪವಿಭಾಗದ ಖಡಕ್ ಅಧಿಕಾರಿ ಎಸಿಪಿ ಚಂದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದಿನಿಂದ ಈ ತನಿಖೆ ಚಂದನ್ ಅವರಿಂದ ಮುಂದುವರೆಯಲಿದೆ.
ದರ್ಶನ್ ಅವರು ಮೈಸೂರಿನಲ್ಲಿ ಇದ್ದಂತಹ ಸಮಯದಲ್ಲಿ ಅವರನ್ನು ಕರೆತರಲು ಚಂದನ್ ಕುಮಾರ್ ಅವರು ಸಹ ಹೋಗಿದ್ದರು. ಈ ವೇಳೆ ದರ್ಶನ್ ಬರಲು ಹಿಂದೇಟು ಹಾಕಿದಾಗ, ಬರ್ತಿಯಾ ಇಲ್ಲಾ ಕಾಲಿಗೆ ಗುಂಡೇಟು ನೀಡಿ ಎಳೆದುಕೊಂಡು ಹೋಗಬೇಕಾ ಎಂದು ಖಡಕ್ ವಾರ್ನಿಂಗ್ ನೀಡಿ ಕರೆತಂದಿದ್ದರು. ಚಂದನ್ ಕುಮಾರ್ ಅವರು ದಕ್ಷ ಅಧಿಕಾರಿ ಎನಿಸಿಕೊಂಡಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡಿ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಅಲ್ಲದೆ, ಕ್ಲೀನ್ಹ್ಯಾಂಡ್ ಎಂಬುದು ಗಮನಾರ್ಹ. ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಯಾವುದೇ ವಿಚಾರದಲ್ಲಿ ರಾಜಿಯಾಗುವುದೇ ಇಲ್ಲ. ಕ್ರಿಮಿನಲ್ಗಳಿಗೆ ಸಿಂಹ ಸ್ವಪ್ನವಾಗಿರುವ ಚಂದನ್ ಕುಮಾರ್, ಅಧಿಕಾರ ವಹಿಸಿಕೊಂಡ ಬಳಿಕ ಅಪರಾಧಗಳು ತಗ್ಗಿವೆ.
ದರ್ಶನ್ ಪ್ರಕರಣದ ತನಿಖೆಯ ದಿಕ್ಕು ಬೇರೆಡೆಗೆ ಹೊರಳುತ್ತಿರುವ ಸಂದರ್ಭದಲ್ಲೇ ಖಡಕ್ ಅಧಿಕಾರಿಗೆ ತನಿಖೆಯ ಜವಾಬ್ದಾರಿ ನೀಡಿದ್ದು, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ.
ಅಂದಹಾಗೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಎರಡು ದಿನಗಳ ಹಿಂದೆ ತಮ್ಮ ಈ ಹಿಂದಿನ ಠಾಣೆಗೆ ವಾಪಸ್ ಮರಳಲು ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಪ್ರಕರಣದಿಂದ ಗಿರೀಶ್ ಹೊರ ನಡೆದಿದ್ದಾರೆ. ಹೀಗಾಗಿ ಈ ಪ್ರಕರಣದ ಜಾವಾಬ್ದಾರಿ ಸಂಪೂರ್ಣವಾಗಿ ಎಸಿಪಿ ಚಂದನ್ ಅವರ ಹೆಗಲ ಮೇಲೆ ಬಿದ್ದಿದ್ದು, ಕ್ರಿಮಿನಲ್ಗಳ ಎದೆಯಲ್ಲಿ ನಡುಕ ಹುಟ್ಟಿದೆ.
ಏನಿದು ಪ್ರಕರಣ?
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
ದರ್ಶನ್ ರಕ್ಷಿಸಲು ಸಿಎಂ ಮೇಲೆ ಒತ್ತಡ? ಮರಣೋತ್ತರ ವರದಿ ತಿರುಚಲು ವೈದ್ಯರಿಗೂ 1 ಕೋಟಿ ಆಫರ್?


