ಬೆಂಗಳೂರು: ತಮ್ಮ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಶಿವಾನಂದ ಪಾಟೀಲ್ ಅವರು ಇಂದು (ಮೇ 02) ರಾಜೀನಾಮೆಯನ್ನು ನೀಡಿದ್ದಾರೆ. ಇಂದು ಬೆಳಗ್ಗೆ ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಿವಾನಂದ ಪಾಟೀಲ್, ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ನೀಡಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ್ ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಆದುದರಿಂದ, ಶ್ರೀ ಬಸನಗೌಡ ಆರ್. ಪಾಟೀಲ್ ಯತ್ನಾಳ್ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಶಿವಾನಂದ ಪಾಟೀಲ್ ಅವರು ಯು.ಟಿ. ಖಾದರ್ಗೆ ನೀಡಿದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅವರಪ್ಪನಿಗೆ ಹುಟ್ಟಿದ್ದರೆ ಸಚಿವ ಶಿವಾನಂದ ಪಾಟೀಲ್ ನನ್ನ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲಲಿ. ಅವರ ಮನೆತನದ ಹೆಸರು ಪಾಟೀಲ ಅಲ್ಲ, ಹಚಡದ ಅಂತ ಇತ್ತು. ರಾಜಕೀಯ ಲಾಭಕ್ಕಾಗಿ ಪಾಟೀಲ್ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೂ ಮೊದಲು ಹೇಳಿಕೆ ನೀಡಿದ್ದ ಶಿವಾನಂದ ಪಾಟೀಲ್, ಯತ್ನಾಳ್ ವಿರುದ್ಧ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ ಎಂದಿದ್ದರು. ಹೀಗಾಗಿ ಯತ್ನಾಳ್ ಸವಾಲು ಹಾಕಿದ್ದರು. ಇದೀಗ ಪಾಟೀಲ್ ಕೂಡ ಸವಾಲು ಸ್ವೀಕರಿಸಿ ರಾಜೀನಾಮೆ ನೀಡಿದ್ದಾರೆ.


