ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ – ಪ್ರತಿ ಹೇಳಿಕೆಗಳ ಜಟಾಪಟಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದರಿಂದ ʻ5 ವರ್ಷ ನಾನೇ ಸಿಎಂʼ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆಯೇ ಎನ್ನುವ ಪ್ರಶ್ನೆಯೂ ಮೂಡಿದೆ.
ಸದ್ಯ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯರನ್ನ ನೇಮಕ ಮಾಡಲಾಗಿದೆ. ಮಂಡಳಿಯ ಚಟುವಟಿಕೆಗಳನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ನಿರ್ಧರಿಸಿದ್ದು, ಇದೇ ಜುಲೈ 15ರಂದು ಬೆಂಗಳೂರಿನಲ್ಲಿ ಮೊದಲ ಸಭೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ (KPCC) ಕಚೇರಿ ಆವರಣದಲ್ಲಿನ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಈ ಪೈಕಿ ಐವರು ಮಾಜಿ ಸಿಎಂಗಳು, 10 ಮಂದಿ ಕೇಂದ್ರದ ಮಾಜಿ ಸಚಿವರೂ ಸಹ ಪಾಲ್ಗೊಳ್ಳುವ ಸಾಧ್ಯತೆಯಿದೆ.
ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಚರ್ಚಿಸಿ, ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸಲು ಈ ವೇದಿಕೆ ಸಿದ್ಧಪಡಿಸಲಾಗಿದೆ.
ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಈ ಸಲಹಾ ಮಂಡಳಿಯನ್ನು ಸಿದ್ದರಾಮಯ್ಯ ಅವರು ಮುನ್ನಡೆಸಲಿದ್ದಾರೆ. ಸಲಹಾ ಮಂಡಳಿ ರಚನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅನುಮೋದನೆ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರ ಪೈಕಿ ಸಿದ್ದರಾಮಯ್ಯ ಅವರೊಂದಿಗೆ ಬಿ.ಕೆ ಹರಿಪ್ರಸಾದ್ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಈ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಈ ಸಲಹಾ ಮಂಡಳಿಯು ಹಲವು ಸಲಹೆಗಳನ್ನು ನೀಡಲಿದೆ. ದೇಶದಾದ್ಯಂತ ಹಿಂದುಳಿದ ವರ್ಗಗಳ ಸಮಸ್ಯೆ, ಸವಾಲುಗಳನ್ನು ಅರಿತು ಸಲಹೆ ನೀಡುವುದರ ಜೊತೆಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ.
ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯಲ್ಲಿ ಯಾರೆಲ್ಲ ಇರಲಿದ್ದಾರೆ?
ಸಿದ್ದರಾಮಯ್ಯ (ಅಧ್ಯಕ್ಷರು), ಬಿ.ಕೆ. ಹರಿಪ್ರಸಾದ್, ಅಶೋಕ್ ಗೆಹ್ಲೋಟ್, ಭೂಪೇಶ್ ಬಘೇಲ್, ವಿ.ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್‌ದೇವ್‌ರಾವ್ ವಡೆಟ್ಟಿವಾರ್, ವಿ. ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್ ಕುಮಾರ್ ಗೌಡ, ಪೊನ್ನಮ್ ಪ್ರಭಾಕ, ಡಾ. ವೀರಪ್ಪ ಮೊಯಿಲಿ, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ, ಡಾ. ಅನಿಲ್ ಜೈಹಿಂದ್- ಸಲಹಾ ಮಂಡಳಿಯ ಸಂಚಾಲಕರು, ಜಿತೇಂದರ್ ಬಘೇಲ್- ಸಲಹಾ ಮಂಡಳಿಯ ಕಾರ್ಯದರ್ಶಿ.


