BBMP
Loading ...

Prajwal

Greater Bengaluru News9 : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ಕೇಳಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭಾವುಕರಾಗಿದ್ದಾರೆ ಎನ್ನಲಾಗಿದೆ.

ಅಜ್ಜಿ ಚೆನ್ನಮ್ಮ ಅವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಪ್ರಜ್ವಲ್ ರೇವಣ್ಣ, ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕಣ್ಣೀರಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಜ್ಜಿಯ ಅಂತಿಮ ದಿನಗಳಲ್ಲಿ ಅವರನ್ನು ಭೇಟಿ ಮಾಡಲು ಅಥವಾ ಕೊನೆಯ ಮುಖ ನೋಡಲು ಸಾಧ್ಯವಾಗದ ನೋವು ಅವರನ್ನು ಕಾಡಿದೆ ಎನ್ನಲಾಗಿದೆ. ಈ ದುಃಖದಿಂದ ಅವರು ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡ ಕುಟುಂಬದ ಜಮೀನಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನಡೆಯಲಿದೆ.

ಅಂತ್ಯಕ್ರಿಯೆಗೆ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿದ್ದು, ವಿಧಿವಿಧಾನ ನಡೆಯಲಿರುವ ಸ್ಥಳದಲ್ಲಿ ನೆಲ ಸಮತಟ್ಟು ಮಾಡುವ ಕೆಲಸ ಪೂರ್ಣಗೊಂಡಿದೆ. ಅಲ್ಲದೆ ಶಾಮಿಯಾನ, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಸುಮಾರು 4 ಸಾವಿರ ಕುರ್ಚಿಗಳನ್ನು ತರಿಸಿ ಅಳವಡಿಸುವ ಕಾರ್ಯವೂ ನಡೆಯುತ್ತಿದೆ.

ರಾಜ್ಯದ ವಿವಿಧ ಭಾಗಗಳಿಂದ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ಹಾಗೂ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಗತ್ಯ ಭದ್ರತೆ ಹಾಗೂ ಇತರೆ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ.

Leave a Reply

Your email address will not be published. Required fields are marked *