Greater Bengaluru News9: ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದು, ದೀಪ ಬೆಳಗಿಸಿ, ಚಾಮುಂಡಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾಗೆ ಇಂದು (ಸೆ.22) ಅಧಿಕೃತ ಚಾಲನೆ ನೀಡಿದರು.
ಚಾಮುಂಡೇಶ್ವರಿ ದೇವಸ್ಥಾನದ ಹೊರ ಆವರಣದಲ್ಲಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಅವರು ದಸರಾ ಹಬ್ಬಕ್ಕೆ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಮಯ್ಯ, ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಜಿಲ್ಲಾಡಳಿತ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇಡೀ ದಸರಾ ಉದ್ಘಾಟನೆಯ ಕೇಂದ್ರ ಬಿಂದುವಾಗಿದ್ದು ಬಾನು ಮುಷ್ತಾಕ್ ಅವರು. ಈ ಹಿಂದೆ ಅವರು ಆಡಿದ್ದ ಒಂದು ಮಾತು ವಿವಾದಕ್ಕೆ ಗುರಿಯಾಗಿತ್ತು. ಅಲ್ಲದೆ, ದಸರಾ ಉದ್ಘಾಟಿಸಬಾರದು ಎಂಬ ಕೂಗು ಗಟ್ಟಿಯಾಗಿ ಕೇಳಿಬಂದಿತ್ತು. ಈ ವಿವಾದ ನ್ಯಾಯಾಲಯದ ಮೆಟ್ಟಿಲು ಕೂಡ ಏರಿತ್ತು. ಆದರೆ, ಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿಯಿತು. ಅಂತಿಮವಾಗಿ ಇಂದು ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾಡಳಿತ ವತಿಯಿಂದ ಬಾನು ಅವರಿಗೆ ಸನ್ಮಾನ ಕೂಡ ಮಾಡಲಾಯಿತು.
ಹೈಕೋರ್ಟ್ ಆದೇಶ
ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರವನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಕಳೆದ ಸೋಮವಾರ (ಸೆ.15) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಆದ್ದರಿಂದ ಅರ್ಜಿ ವಜಾಗೊಳಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ ತೀರ್ಪು ನೀಡಿತು. ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್, ಎಚ್.ಎಸ್.ಗೌರವ್ ಎಂಬವರೂ ಸಲ್ಲಿಸಿದ್ದ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿತು.
ಸುಪ್ರೀಂಕೋರ್ಟ್ನಲ್ಲೂ ವಜಾ
ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ 15ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಸೆ.19ರಂದು ವಜಾಗೊಳಿಸಿತು. ಹೈಕೋರ್ಟ್ ಆದೇಶದ ವಿರುದ್ಧ ಎಚ್.ಎಸ್. ಗೌರವ್ ಎಂಬುವರು ದೇಶದ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸಮಾನತೆ, ಭ್ರಾತೃತ್ವ ಮತ್ತು ಜಾತ್ಯತೀತತೆಯ ಆದರ್ಶಗಳನ್ನು ಒಳಗೊಂಡಿರುವ ಸಂವಿಧಾನದ ಪೀಠಿಕೆಯನ್ನು ನೀವು ಓದಿದ್ದೀರಾ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು ಅರ್ಜಿದಾರರಾದ ಎಚ್.ಎಸ್. ಗೌರವ್ ಅವರನ್ನು ಕೇಳಿದರು. ಅಲ್ಲದೆ, ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ನಡೆಸುತ್ತದೆ ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿದರು.


