Greater Bengaluru News9 : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವವರು ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ನೀಡುವಂತೆ ಕೋರಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು, ಶಿಕ್ಷೆಯನ್ನು ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳ ಮೇಲೆ ಗಮನ ಕೇಂದ್ರೀಕೃತವಾಗಿದೆ.
ತೀರ್ಪು ಪ್ರಕಟವಾದ 90 ದಿನಗಳೊಳಗೆ ಶಿಕ್ಷೆಗೆ ತಡೆ ಸಿಗದಿದ್ದರೆ ಶಾಸಕ ಸ್ಥಾನ ಅನರ್ಹವಾಗುವ ಸಾಧ್ಯತೆ ಇರುವ ಹಿನ್ನೆಲೆ ವಿನಯ್ ಕುಲಕರ್ಣಿ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ:
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಬಳಿಕ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು.
ಸಿಬಿಐ ಸಂಸ್ಥೆ ಸುದೀರ್ಘ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿತ್ತು. ಸುಮಾರು 10 ವರ್ಷಗಳ ಕಾಲ ನಡೆದ ವಿಚಾರಣೆ ಬಳಿಕ, ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯ ನಾಶ, ಮಾರಕಾಸ್ತ್ರಗಳಿಂದ ಹಲ್ಲೆ ಹಾಗೂ ಅಕ್ರಮ ಕೂಟ ಸೇರಿದಂತೆ ಹಲವು ಆರೋಪಗಳಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿತ್ತು.
ಈ ವೇಳೆ ಸೋಮಶೇಖರ್ ನ್ಯಾಮಗೌಡ ಮತ್ತು ವಾಸುದೇವ್ ನಿಲೇಕಣಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಉಳಿದ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.
ನಂತರ ತೀರ್ಪು ಪ್ರಕಟಿಸಿದ ನ್ಯಾಯಾಲಯ, ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಇನ್ನು ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.


